ಬೆಂಗಳೂರು : ಕುಡಿಯುವ ನೀರು ಸರಬರಾಜು ಹಾಗೂ ಜಾನುವಾರುಗಳಿಗೆ ಮೇವು ಸರಬರಾಜನ್ನು ಖಾತರಿ ಪಡಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಕಡ್ಡಾಯವಾಗಿ ಪ್ರತಿ ದಿನ ಗ್ರಾಮಗಳಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಸೂಚಿಸಿದರು.

ಬರ ಪರಿಸ್ಥಿತಿ ಕುರಿತು ಅವರು ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಈ ಸೂಚನೆ ನೀಡಿದರು.

ಸಮಸ್ಯೆ ಇರುವ ಗ್ರಾಮಗಳಲ್ಲಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ತೀರ್ಮಾನ ಕೈಗೊಳ್ಳಲು ಅಧಿಕಾರ ನೀಡಲಾಗಿದ್ದು, ಜನ/ಜಾನುವಾರುಗಳಿಗೆ ಕುಡಿಯುವ ನೀರಿನ ಸರಬರಾಜು ಮತ್ತು ಮೇವಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗಬಾರದು.

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಎಲ್ಲಾ ಜಿಲ್ಲೆಗಳಲ್ಲಿ 24×7 ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಇವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ನೆರೆ ಅನಾಹುತ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸಾಮಾನ್ಯವಾಗಿ 50 ರಿಂದ 60 ಲಕ್ಷ ಮಾನವ ದಿನಗಳು ಸೃಜನೆಯಾಗುತ್ತದೆ. ಆದರೆ ಈ ಬಾರಿ ಇದು 1.80 ಕೋಟಿ ಮಾನವ ದಿನಗಳಷ್ಟಾಗಿದೆ.

ಕೆಲವು ಜಿಲ್ಲೆಗಳಲ್ಲಿ ಇನ್ನಷ್ಟು ಸಮುದಾಯ ಆಸ್ತಿ ಸೃಜನೆ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಬರಪೀಡಿತ ಪ್ರದೇಶದ ಜನರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಭೈರೇಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ. ರಮಣರೆಡ್ಡಿ ,ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.