ಉಡುಪಿ, ಅ.13: ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಗಳ ವತಿಯಿಂದ ಹತ್ರಾಸ್ ದಲಿತ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ ವಿಚಾರಣೆಯ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಇಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಿಗದಿತ ಅವಧಿಯಲ್ಲಿ ಪ್ರಕರಣದ ಪರಿಣಾಮಕಾರಿ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೋಲೀಸ್ ಮತ್ತು ಇತರ ಅಧಿಕಾರಿಗಳ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು ಒತ್ತಾಯಿಸಿದರು.
ಮೃತ ಯುವತಿಯ ಕುಟುಂಬಕ್ಕೆ ಗರಿಷ್ಠ ರಕ್ಷಣೆ ನೀಡಬೇಕು. ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು. ದೌರ್ಜನ್ಯಕ್ಕೆ ಒಳಗಾದವರ ಕುಟುಂಬಗಳಿಗೆ ಕೃಷಿ ಭೂಮಿ, ಸರಕಾರಿ ಉದ್ಯೋಗ, ವಾಸಕ್ಕೆ ಮನೆಗಳನ್ನು ಒದಗಿಸಬೇಕು. ಮೀಸಲಾತಿ, ದಲಿತರ ದೌರ್ಜನ್ಯ ತಡೆ ಕಾಯ್ದೆ ಮತ್ತು ಮಹಿಳಾ ದೌರ್ಜನ್ಯ ವಿರೋಧಿ ಕಾಯಿದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ದಲಿತರು ಹಾಗೂ ಮಹಿಳೆಯರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ಅನುದಾನವನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಶಶಿಧರ ಗೊಲ್ಲ, ಸುರೇಶ್ ಕಲ್ಲಾಗರ್, ರಾಮ ಕರ್ಕಡ, ಕವಿರಾಜ್, ಬಲ್ಕೀಸ್ ಕುಂದಾಪುರ, ನಳಿನಿ, ಶಕುಂತಳಾ, ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ ಮೊದಲಾದವರು ಇದ್ದರು.