ಮೈಸೂರು, (ಫೆ.23): ಕೊಡವರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
2020ರ ಡಿಸೆಂಬರ್ 18ರಂದು ಅರವಿಂದ ನಗರದ ಕಾಲಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮ ಜನಾಧಿಕಾರ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದರು.
ಸಮಾರಂಭದಲ್ಲಿ ಭಾಷಣ ಮಾಡುವಾಗ ಸಿದ್ದರಾಮಯ್ಯ, “ಕೊಡವರು ಸಹ ದನದ ಮಾಂಸವನ್ನು ತಿನ್ನುತ್ತಾರೆ” ಎಂದು ಹೇಳಿಕೆ ನೀಡಿದ್ದರು.ಇಂತಹ ಹೇಳಿಕೆ ಮೂಲಕ ಅವರು ಕೊಡವ ಜನಾಂಗದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಉದ್ದೇಶಪೂರ್ವಕವಾಗಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಐಪಿಸಿ ಸೆಕ್ಷನ್ 153ರಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಈ ಘಟನೆಯು ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ.